ಇಂದು ನಿಷೇಧಾಜ್ಞೆ

ಬಾಬರಿ ಮಸೀದಿ ಧ್ವಂಸ ಹಿನ್ನೆಲೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಬಾಬರಿ ಮಸೀದಿ ಧ್ವಂಸಗೊಂಡ ದಿನವಾಗಿರುವ ಡಿಸೆಂಬರ್ 6ರ ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಹಾಗೂ ಅಂದು ವಿವಿಧ ಸಂಘಟನೆಗಳು ಹಮ್ಮಿಕೊಳ್ಳುವ ವಿಜಯೋತ್ಸವ ಆಚರಣೆಗೆ ಸಂಬಂಧಿಸಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಮತ್ತು ಮಂಗಳೂರು ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಅವರು ಈ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 6ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಸಾರ್ವಜನಿಕ, ಧಾರ್ಮಿಕ, ರಾಜಕೀಯ ಬಹಿರಂಗ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಅಲ್ಲದೆ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖೋಗಳಿಗೆ ಅವಕಾಶ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

LEAVE A REPLY