ಶಿವಪುರ ಗ್ರಾಮಸಭೆಗೆ ಗೈರಾದ ಪೊಲೀಸರ ವಿರುದ್ಧ ಆಕ್ರೋಶ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ಮಹಿಳೆಯರು ಹಾಗೂ ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ತಡೆಗಟ್ಟವ ನಿಟ್ಟಿನಲ್ಲಿ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು. ಆದರೆ ಮಹಿಳೆಯರ ಹಾಗೂ ಮಕ್ಕಳ ವಿಶೇಷ ಗ್ರಾಮಸಭೆಗೆ ಪೊಲೀಸರು ಗೈರಾಗಿರುವುದರ ವಿರುದ್ಧ ತಾಲೂಕು ಶಿಕ್ಷಣ ಸಂಪನ್ಮೂಲ ವ್ಯಕ್ತಿ ಶೋಭಾ ಭಾಸ್ಕರ್ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಕಳ ತಾಲೂಕಿನ ಶಿವಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಮಹಿಳಾ ಹಾಗೂ ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ಅರಿವು ನೆರವು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಖ್ಯವಾಗಿ ಗ್ರಾಮ ವ್ಯಾಪ್ತಿಯಲ್ಲಿನ ಶಾಲಾ ಮಕ್ಕಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ತಾಯಂದಿರುವ ಮಕ್ಕಳ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಮಕ್ಕಳನ್ನು ಅಪರಿಚಿತರೊಂದಿಗೆ ಮಾತನಾಡುವುದು, ಮಕ್ಕಳನ್ನು ಅಪರಿಚಿತ ಆಟೋ, ಬೈಕಿನಲ್ಲಿ ಶಾಲೆಗೆ ಕಳುಹಿಸದೆ ಪರಿಚಿತ ವಾಹನದಲ್ಲೇ ಕಳುಹಿಸಬೇಕು” ಎಂದರು.

ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯಗಳಾದ ವರದಕ್ಷಿಣೆ ಕಿರುಕುಳ, ದೈಹಿಕ ಹಲ್ಲೆಗಳಂತಹ ಸಮಸ್ಯೆಗಳಿಗೆ ಮಹಿಳಾ ಸಾಂತ್ವನ ಕೇಂದ್ರಗಳಿಗೆ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆ ವಿಶೇಷ ನಿಗಾವಹಿಸಿದಾಗ ಇಂತಹ ಪ್ರಕರಣಗಳಿಗೆ ಕಡಿವಾಣ ಸಾಧ್ಯ ಎಂದರು.