ಉಸ್ತುವಾರಿ ಸಚಿವ ಭೇಟಿ, ಸಮಸ್ಯೆ ಪರಿಶೀಲನೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಧಾರ್ ನೋಂದಣಿ ಗೊಂದಲ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಆಧಾರ್ ಕಾರ್ಡ್ ಪಡೆಯಲೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರದಂದು ಭಾರೀ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಇಲ್ಲಿನ ಅವ್ಯವಸ್ಥೆ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನು ಕಂಡ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಆಧಾರ್ ಕೇಂದ್ರದ ಸಮಸ್ಯೆಯನ್ನು ಪರಿಶೀಲಿಸಿದರು. ಅಲ್ಲದೆ ಇಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡುವ ಮೂಲಕ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಆದೇಶಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, “ಇದೀಗ ಪ್ರತಿಯೊಂದÀಕ್ಕೂ ಆಧಾರ್ ಕಾರ್ಡನ್ನು ಕೇಂದ್ರ ಸರಕಾರ ಕಡ್ಡಾಯ ಮಾಡಿದ್ದು, ಜನ ಇದನ್ನು ಪಡೆಯಲೇಬೇಕಾದ ಅನಿವಾರ್ಯ ಸ್ಥಿತಿ ಎದುರಿಸುತ್ತಿದ್ದಾರೆ. ಅಲ್ಲದೆ ಹೊಸ ನೋಂದಣಿ ಜೊತೆಗೆ ಆಧಾರ್ ಕಾರ್ಡ್ ತಿದ್ದುಪಡಿ ಕೂಡಾ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಜನ ಒಂದೇ ಸಮನೇ ಇಲ್ಲಿಗೆ ಬಂದಿರುವುದರಿಂದ ಸಮಸ್ಯೆ ಬಿಗಡಾಯಿಸಿದೆ. ಮಂಗಳೂರಿನಲ್ಲಿ ಈಗಾಗಲೇ 5 ಸೆಂಟರುಗಳು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 23 ಸೆಂಟರುಗಳನ್ನು ಮಾಡಲಾಗುವುದು” ಎಂದರು.

ಪ್ರತೀ ಗ್ರಾಮಗಳ ಸೇವಾ ಕೇಂದ್ರಗಳಲ್ಲೂ ಸರಕಾರದ ವತಿಯಿಂದಲೇ ಆಧಾರ್ ಕಾರ್ಡ್ ನೀಡಲು ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್, ಅಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ಆಧಾರ್ ಕಾರ್ಡ್ ಪಡೆಯಲು ತಾವು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೆಲವರು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ತಮ್ಮ ಅಳಲು ತೋಡಿಕೊಂಡರು.