ಕಂಬಳಕ್ಕೆ ನೀಡಿದ್ದ ತಡೆಯಾಜ್ಞೆ ತೆರವು ಕೋರಿ ಮಧ್ಯಂತರ ಅರ್ಜಿ ಸಲ್ಲಿಕೆ

ಬೆಂಗಳೂರು : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುವ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆ ಕಂಬಳ ಆಯೋಜನೆಗೆ ಸಂಬಂಧಿಸಿ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಹೈಕೋರ್ಟಿನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

ಉಭಯ ಜಿಲ್ಲೆಗಳ ಕಂಬಳ ಸಮಿತಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ರಾಜ್ಯ ಸರಕಾರವು ಡಿ 2ರಂದು ಕಾನೂನು ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಂಬಳ ಆಯೋಜನೆ ಪರಿಶೀಲನೆಗೆ ಉನ್ನತ ತಜ್ಞರ ಸಮಿತಿ ರೂಪಿಸುವುದಕ್ಕೆ ನಿರ್ಧರಿಸಿದೆ.

ಕಂಬಳದಲ್ಲಿ ಬಳಸುವ ಕೋಣಗಳಿಗೆ ಹಿಂಸೆ ನೀಡಲಾಗುತ್ತಿದೆಯೇ ಇಲ್ಲವೇ ಎನ್ನುವ ಬಗ್ಗೆ ಈ ಸಮಿತಿ ಕೂಲಂಕಷವಾಗಿ ಪರಿಶೀಲನೆ ನಡೆಸಲಿದೆ. ಸತತ ಎರಡು ವರ್ಷಗಳ ಕಾಲ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಸಮಿತಿ ಸಲ್ಲಿಸುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ವರದಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ನೀಡುವ ಆದೇಶಕ್ಕೆ ಸರಕಾರವು ಬದ್ಧವಾಗಿರುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಕಂಬಳ ಆಯೋಜನೆಗೆ ಅನುಮತಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ನ 22ರಂದು ಕಂಬಳ ನಿಷೇಧ ಆದೇಶ ಹೊರಡಿಸಲಾಗಿತ್ತು.