ಕಾರ್ತಿಕ್ ರಾಜ್ ಕೊಲೆ ಪ್ರಕರಣ ಶೀಘ್ರ ಸಿಒಡಿಗೆ : ಸಚಿವ ಖಾದರ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರೂ ಇದುವರೆಗೂ ಆರೋಪಿಗಳನ್ನು ಬಂಧಿಸಲು ಸಾದ್ಯವಾಗಿಲ್ಲ. ಇಲ್ಲಿಯವರೆಗೆ ಯಾವುದೇ ಸುಳಿವು ಸಿಗದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಒಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಉಳ್ಳಾಲ ಶಾಸಕ, ಪಡಿತರ ಸಚಿವ ಯು ಟಿ ಖಾದರ್ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಕೂಡಲೇ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಹೇಳಿದರು. ಕಾರ್ತಿಕ್ ರಾಜ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾರ್ತಿಕ್ ರಾಜ್ ಹತ್ಯೆ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಆರೋಪಿಗಳ ಸುಳಿವೇ ಇಲ್ಲ. ಕುಟುಂಬ ನ್ಯಾಯಕ್ಕಾಗಿ ಎದುರು ನೋಡುತ್ತಿದೆ. ಪೊಲೀಸರು ತಮ್ಮ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವುದಕ್ಕಾಗಿ ಪ್ರಕರಣವನ್ನು ಸಿಒಡಿಗೆ ವಹಿಸಲು ಚಿಂತನೆ ನಡೆಸಲಾಗಿದೆ ಎಂದರು.