ಅಪಘಾತಕ್ಕೀಡಾದ ಪಾದಚಾರಿ ಮೃತ

ಸಾಂದರ್ಭಿಕ ಚಿತ್ರ

ಬಂಟ್ವಾಳ : ತಾಲೂಕಿನ ಬಿ ಸಿ ರೋಡು ಮುಖ್ಯಪೇಟೆಯಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತರನ್ನು ಬಿ ಮೂಡ ಗ್ರಾಮದ ಅಜ್ಜಿಬೆಟ್ಟು ನಿವಾಸಿ, ಬಿ ಸಿ ರೋಡಿನ ಐಸ್ ವ್ಯಾಪಾರಿ ಪೂವಪ್ಪ (55) ಎಂದು ಹೆಸರಿಸಲಾಗಿದೆ. ಇವರು ಕಳೆದ ವಾರ ಬಿ ಸಿ ರೋಡು ಪೇಟೆಯಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೈಕಂಬ ಕಡೆಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಹೆದ್ದಾರಿಗೆಸೆಯಲ್ಪಟ್ಟ ಪೂವಪ್ಪ ಗಂಭೀರ ಗಾಯಗೊಂಡಿದ್ದರು. ತಕ್ಷಣ ಇವರನ್ನು ಸ್ಥಳೀಯರು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಇವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.