ಮಾದಕ ವಸ್ತು ತಡೆಯಲು ಪೊಲೀಸರಿಗೆ ರೈ ನಿರ್ದೇಶನ

ಮಂಗಳೂರು : “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ದ್ರವ್ಯ ಜಾಲ ನಿಗ್ರಹಕ್ಕೆ ಪೊಲೀಸರು ತಮ್ಮ ಕೈಲಾದ ಮೀರಿ ಕೆಲಸ ಮಾಡುತ್ತಿದ್ದಾರೆ. ಕೆಲ ಕಿಡಿಗೇಡಿಗಳು ಮಾದಕ ದ್ರವ್ಯ ಜಾಲದಲ್ಲಿ ತೊಡಗಿಸಿಕೊಂಡಿದ್ದಾರೆ. ನಿಯಂತ್ರಣಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ. ಸಕ್ರ್ಯೂಟ್ ಹೌಸಿನಲ್ಲಿ ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. “ಜಿಲ್ಲೆಯಲ್ಲಿ ಮಾದಕ ದ್ರವ್ಯ ಜಾಲ ಕಾಂಗ್ರೆಸ್ ಸರಕಾರ ಬಂದ ಬಳಿಕ ಹೆಚ್ಚಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಲಾಗುತ್ತಿದೆ. ಪೊಲೀಸರು ತಮ್ಮದೇ ಶೈಲಿಯಲ್ಲಿ ಇದನ್ನು ಮಟ್ಟ ಹಾಕುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆದ ಕೆಲವು ಘಟನೆಗಳು ಮಾದಕ ದ್ರವ್ಯಜಾಲದಿಂದಲೇ ನಡೆದಿರುವುದು ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಆದರೆ ಸಂಸದ ನಳಿನ್ ಕುಮಾರ್  ಸೇರಿದಂತೆ ಹಲವು ಮಂದಿ ಇದನ್ನು ರಾಜಕೀಯಗೊಳಿಸುತ್ತಿದ್ದಾರೆ” ಎಂದು ದೂರಿದರು.