ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಚಚ್ಛತೆ ನಿಯಮ 2017 ಜಾರಿಗೆ ಸರ್ವಾನುಮತದ ಒಪ್ಪಿಗೆ

ಸಾಂದರ್ಭಿಕ ಚಿತ್ರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಕರಡು ನಿಯಮವನ್ನು ಜಾರಿಗೊಳಿಸಲು ಜಿಲ್ಲಾಪಂಚಾಯತ್ ಸದಸ್ಯರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ಈ ನಿಯಮವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 230 ಗ್ರಾಮ ಪಂಚಾಯತುಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನವನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸುವ ಮಾರ್ಗೋಪಾಯಗಳನ್ನು ಒಳಗೊಂಡಿದೆ.

ಈ ನಿರ್ಧಾರವನ್ನು ಮಂಗಳವಾರ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಪಂಚಾಯತ್ ವಿಶೇಷ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಸಭೆಯನ್ನು ಎಲ್ಲಾ ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಚರ್ಚಿಸುವ ಉದ್ದೇಶದಿಂದ ವಿಶೇಷವಾಗಿ ಕರೆಯಲಾಗಿತ್ತು.

ರಾಜ್ಯ ಸರ್ಕಾರವು ಪ್ಲಾಸ್ಟಿಕ್ ಉತ್ಪನ್ನ ನಿಷೇಧಿಸಿ 2016 ಮಾರ್ಚ್ 11 ರಂದು ಗೆಝೆಟ್ ಅಧಿಸೂಚನೆ ಹೊರಡಿಸಿದೆ. ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿ ಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಧ್ವಜಗಳು, ಪ್ಲೇಟ್, ಕ್ಲಿಪ್, ಸ್ಪೂನ್, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಟೇಬಲ್ಲುಗಳಿಗೆ ಬಳಸುವ ಪ್ಲಾಸ್ಟಿಕ್ ಶೀಟ್‍ನಿಷೇಶಧಿಸಿ ಅಧಿಸೂಚನೆ ಹೊರಡಿಸಿತ್ತು. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಂದಾಯ ಇಲಾಖೆ, ನಗರ ಸ್ಥಳೀಯ ಪ್ರತಿನಿಧಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಾಣಿಜ್ಯ ತೆರಿಗೆ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಕಾನೂನು ಮಾಪನಾಶಾಸ್ತ್ರ, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಪರಿಸರ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ  ಕೇಸು ದಾಖಲಿಸುವ ಅಧಿಕಾರವನ್ನು ಹೊಂದಿದ್ದಾರೆ.

ಸ್ವಚ್ಛತಾ ಕರಡು ನಿಯಮದ ಪ್ರಕಾರ ಪ್ರತಿ ಗ್ರಾಮ ಪಂಚಾಯತಿನಲ್ಲಿ ಸದಸ್ಯರ ಸಮಿತಿ ಮತ್ತು ವಾರ್ಡ್ ಮಟ್ಟದಲ್ಲಿ ಉಪ ಸಮಿತಿಯನ್ನು ರಚಿಸಲಾಗುವುದು. ಪ್ರತಿ ಸಮಿತಿಗೆ 10 ಮನೆಗಳನ್ನು ನೀಡಲಾಗುವುದು. ಈ ಸಮಿತಿಗಳು ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತವೆ. ಉಳಿದಂತೆ ಸೀಸಿಟೀವಿ ಕ್ಯಾಮರಾ ಅಳವಡಿಕೆ  ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಿಯಮ ಮಾರ್ಗದರ್ಶನವನ್ನು ನೀಡುತ್ತದೆ.